Top News

ಕೇಂದ್ರ ಸರ್ಕಾರದ ವಿರುದ್ಧ ಚಿಕ್ಕಬಳ್ಳಾಪುರದಲ್ಲಿ ಕಾಂಗ್ರೆಸ್ ಪ್ರತಿಭಟನೆ



ಚಿಕ್ಕಬಳ್ಳಾಪುರ -ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ವೈಫಲ್ಯವನ್ನು ಖಂಡಿಸಿ ಚಿಕ್ಕಬಳ್ಳಾಪುರದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಶನಿವಾರ ಪ್ರತಿಭಟನೆ ನಡೆಯಿತು.

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಆರಂಭವಾದ ಪ್ರತಿಭಟನೆ ಶಿಡ್ಲಘಟ್ಟ ವೃತ್ತದವರೆಗೆ ಸಾಗಿದ್ದು, ಈ ವೇಳೆ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ‘ಮೇಕ್ ಇನ್ ಇಂಡಿಯಾ’, ‘ಒಂದು ದೇಶ ಒಂದು ತೆರಿಗೆ’, ‘ಬೇಟಿ ಬಚಾವೋ ಬೇಟಿ ಪಡಾವೋ’ ಸೇರಿದಂತೆ ಹಲವು ಯೋಜನೆಗಳು ನಿರೀಕ್ಷಿತ ಫಲಿತಾಂಶ ನೀಡಿಲ್ಲ ಎಂದು ಆರೋಪಿಸಲಾಯಿತು. ಕಪ್ಪು ಹಣವನ್ನು ವಾಪಸ್ ತರಲು ವಿಫಲವಾಗಿರುವುದು, ಬೆಲೆ ಏರಿಕೆಯನ್ನು ನಿಯಂತ್ರಿಸಲು ಆಗದಿರುವುದು ಹಾಗೂ 100 ಸ್ಮಾರ್ಟ್ ನಗರಗಳ ನಿರ್ಮಾಣದಲ್ಲಿ ವಿಫಲವಾಗಿರುವುದನ್ನು ಕಾಂಗ್ರೆಸ್ ಮುಖಂಡರು ಟೀಕಿಸಿದರು.

  ಇದೇ ವೇಳೆ ಅಡುಗೆ ಅನಿಲ ಸಿಲಿಂಡರ್ ಬೆಲೆ ಏರಿಕೆ ಹಾಗೂ ಸರಬರಾಜಿನಲ್ಲಿ ಉಂಟಾಗುತ್ತಿರುವ ವ್ಯತ್ಯಯದಿಂದ ಸಾಮಾನ್ಯ ಜನರು ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.


ಈ ಪ್ರತಿಭಟನೆಯಲ್ಲಿ ಹಿರಿಯ ಕಾಂಗ್ರೆಸ್ ಮುಖಂಡರಾದ ನಂದಿ ಅಂಜಿನಪ್ಪ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಕೆಶವರೆಡ್ಡಿ, ಮಂಡಿಕಲ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ. ನಾಗಭೂಷಣ್, ನಂದಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರಕ್ಷಿತ್ ರೆಡ್ಡಿ, ಅಡಗಲ್ ಶ್ರೀಧರ್ ಸೇರಿದಂತೆ ಹಲವು ಮುಖಂಡರು ಭಾಗವಹಿಸಿದ್ದರು.


ಇದೇ ವೇಳೆ ಯುವ ಕಾಂಗ್ರೆಸ್ ಮುಖಂಡರಾದ ಅಂಬರೀಶ್, ವಿನಯ್ ಬಂಗಾರಿ, ಹಮೀಮ್ ಸೇರಿದಂತೆ ಅನೇಕ ಯುವ ಮುಖಂಡರು, ಜನಪ್ರತಿನಿಧಿಗಳು ಹಾಗೂ ಕಾಂಗ್ರೆಸ್ ಪ್ರತಿನಿಧಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿ ಬೆಂಬಲ ವ್ಯಕ್ತಪಡಿಸಿದರು.

Post a Comment

Previous Post Next Post