Top News

ಅಕಾಲಿಕ ಆಲಿಕಲ್ಲು ಮಳೆ: ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರೈತರಿಗೆ ಕೋಟ್ಯಂತರ ನಷ್ಟ; ಸಂಸದ ಡಾ. ಕೆ. ಸುಧಾಕರ್ ಆಗ್ರಹ – ತಕ್ಷಣ ಸಮೀಕ್ಷೆ ನಡೆಸಿ, ವಿಶೇಷ ಪ್ಯಾಕೇಜ್ ಘೋಷಿಸಿ


 ಚಿಕ್ಕಬಳ್ಳಾಪುರ: ಕಳೆದ ಎರಡು ಮೂರು ದಿನಗಳಿಂದ ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಾದ್ಯಂತ ಸುರಿದ ಅಕಾಲಿಕ ಆಲಿಕಲ್ಲು ಮಳೆಯಿಂದಾಗಿ ಈ ಭಾಗದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ವಿಶೇಷವಾಗಿ ಚಿಕ್ಕಬಳ್ಳಾಪುರ ತಾಲ್ಲೂಕಿನ 60 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಸಂಪೂರ್ಣವಾಗಿ ನಾಶವಾಗಿದ್ದು, ಕೋಟ್ಯಂತರ ರೂಪಾಯಿ ಮೌಲ್ಯದ ದ್ರಾಕ್ಷಿ ಬೆಳೆ ಮಣ್ಣುಪಾಲಾಗಿದೆ ಎಂದು ಸಂಸದ ಡಾ. ಕೆ. ಸುಧಾಕರ್ ಅವರು ತಿಳಿಸಿದ್ದಾರೆ.


ಸಂಸದರಾದ ಡಾ. ಕೆ. ಸುಧಾಕರ್ ಅವರು ಈ ಬಗ್ಗೆ ತಮ್ಮ ಫೇಸ್ಬುಕ್ ಪೋಸ್ಟ್ ಮೂಲಕ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ರಾಜ್ಯ ಸರ್ಕಾರಕ್ಕೆ ಹಲವಾರು ಆಗ್ರಹಗಳನ್ನು ಮುಂದಿಟ್ಟಿದ್ದಾರೆ.


ದ್ರಾಕ್ಷಿ ಬೆಳೆ ಸಂಪೂರ್ಣ ನಾಶ:

ಚಿಕ್ಕಬಳ್ಳಾಪುರ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕಟಾವಿಗೆ ಬಂದಿದ್ದ ದ್ರಾಕ್ಷಿ ಗೊಂಚಲುಗಳು ಆಲಿಕಲ್ಲು ಮಳೆಗೆ ನೆಲಕಚ್ಚಿವೆ. ಬೆಳೆ ಚಪ್ಪರಗಳು ಮುರಿದು ಬಿದ್ದಿದ್ದು, ದ್ರಾಕ್ಷಿ ಬೆಳೆಗಾರರು ಕಂಗಾಲಾಗಿದ್ದಾರೆ. ದ್ರಾಕ್ಷಿಯ ಜೊತೆಗೆ ಟೊಮ್ಯಾಟೊ, ಸೌತೆಕಾಯಿ, ಹೂವು ಕೋಸು, ಎಲೆಕೋಸು, ಬದನೆ, ದಾಳಿಂಬೆ, ಗುಲಾಬಿ ಸೇರಿದಂತೆ ವಿವಿಧ ತರಕಾರಿ, ಹಣ್ಣು, ಹೂವಿನ ಬೆಳೆಗಳು ಸಂಪೂರ್ಣ ಹಾನಿಗೊಳಗಾಗಿವೆ ಎಂದು ಸಂಸದರು ತಿಳಿಸಿದ್ದಾರೆ.


ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ಹೊಸಕೋಟೆ ಭಾಗದ ರೈತರು ಕೂಡ ಇದೇ ರೀತಿಯ ಸಂಕಷ್ಟ ಎದುರಿಸುತ್ತಿದ್ದಾರೆ ಎಂದು ಅವರು ವಿವರಿಸಿದ್ದಾರೆ.


ಸರ್ಕಾರಕ್ಕೆ ಸಂಸದರ ಆಗ್ರಹ:

ಯುಗಾದಿ ಹಬ್ಬದ ಸಂಭ್ರಮದಲ್ಲಿ ಹೊಸ ಜೀವನದ ಕನಸು ಕಾಣಬೇಕಿದ್ದ ರೈತರು ಇಂದು ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿ ಕಣ್ಣೀರಿನಲ್ಲಿ ಕೈತೊಳೆಯುವಂತಾಗಿದೆ ಎಂದು ಡಾ. ಸುಧಾಕರ್ ವಿಷಾದಿಸಿದ್ದಾರೆ.


ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು ಕಂದಾಯ ಮತ್ತು ತೋಟಗಾರಿಕಾ ಇಲಾಖೆಯ ಅಧಿಕಾರಿಗಳ ಮೂಲಕ ಜಂಟಿ ಸಮೀಕ್ಷೆ ನಡೆಸಬೇಕು ಎಂದು ಅವರು ಆಗ್ರಹಿಸಿದ್ದಾರೆ.


ವರದಿಗಾಗಿ ತಿಂಗಳುಗಟ್ಟಲೆ ಕಾಯಿಸದೆ, ಆದಷ್ಟು ಬೇಗ ವೈಜ್ಞಾನಿಕವಾಗಿ ಬೆಳೆ ನಷ್ಟವನ್ನು ಅಂದಾಜಿಸಿ ರೈತರ ಖಾತೆಗೆ ಪರಿಹಾರ ಧನ ಜಮೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.


ದ್ರಾಕ್ಷಿ ಬೆಳೆಗಾರರಿಗೆ ವಿಶೇಷ ಆರ್ಥಿಕ ಪ್ಯಾಕೇಜ್ ಆಗ್ರಹ:

ವಿಶೇಷವಾಗಿ ದ್ರಾಕ್ಷಿ ಬೆಳೆಯ ವೆಚ್ಚ ಅಧಿಕವಾಗಿರುವುದರಿಂದ, ಹಾನಿಗೊಳಗಾದ ದ್ರಾಕ್ಷಿ ಬೆಳೆಗಾರರಿಗೆ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಿಸಬೇಕು ಎಂದು ಸಂಸದ ಡಾ. ಸುಧಾಕರ್ ಅವರು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.


ಹೋರಾಟದ ಎಚ್ಚರಿಕೆ:

ಸಂಕಷ್ಟದಲ್ಲಿರುವ ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ರೈತ ಬಾಂಧವರಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಕೂಡಲೇ ಸ್ಪಂದಿಸದಿದ್ದರೆ ಬೀದಿಗಿಳಿದು ಹೋರಾಟ ಮಾಡುವುದು ಅನಿವಾರ್ಯವಾಗುತ್ತದೆ ಎಂದು ಡಾ. ಸುಧಾಕರ್ ಎಚ್ಚರಿಕೆ ನೀಡಿದ್ದಾರೆ.

Post a Comment

Previous Post Next Post