ಚಿಕ್ಕಬಳ್ಳಾಪುರ, ಮಾರ್ಚ್ 23: ಬಾಗೇಪಲ್ಲಿ ತಾಲ್ಲೂಕಿನ ಗೂಳೂರು ಗ್ರಾಮ ಪಂಚಾಯಿತಿಯ ಪಾತಕೋಟ ಗಂಗಮ್ಮ ದೇವಸ್ಥಾನದ ಬಳಿಯಿರುವ ಪುರಾತನ ಐತಿಹಾಸಿಕ ಕಲ್ಯಾಣಿಯನ್ನು ಸ್ವಚ್ಛಗೊಳಿಸುವ ಕಾರ್ಯಕ್ಕೆ ಜಿಲ್ಲಾ ಪಂಚಾಯತ್ ಮತ್ತು ತಾಲ್ಲೂಕು ಪಂಚಾಯಿತಿಯ ವತಿಯಿಂದ ಶ್ರಮದಾನ ಕಾರ್ಯಕ್ರಮ ಆಯೋಜಿಸಲಾಗಿತ್ತು.
ತಾಲ್ಲೂಕು ಪಂಚಾಯತ್ ಆಡಳಿತಾಧಿಕಾರಿ ಶ್ರೀ ಅತೀಕ್ ಪಾಷ ಅವರು ಈ ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಸ್ವಚ್ಛತಾ ಪ್ರತಿಜ್ಞಾ ವಿಧಿ ಬೋಧಿಸಿದರು. ನಂತರ ಅವರು ಶ್ರಮದಾನದಲ್ಲಿ ಭಾಗವಹಿಸಿ ಕಲ್ಯಾಣಿ ಸ್ವಚ್ಛತಾ ಕಾರ್ಯವನ್ನು ವೀಕ್ಷಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿಗಳು, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು, ಗೂಳೂರು ಸೇರಿದಂತೆ ವಿವಿಧ ಗ್ರಾಮ ಪಂಚಾಯಿತಿಗಳ ಪಿಡಿಒಗಳು, ನರೇಗಾ ಸಿಬ್ಬಂದಿ, ಎನ್ಆರ್ಎಲ್ಎಂ ಸಿಬ್ಬಂದಿ, ಗ್ರಾಮ ಪಂಚಾಯಿತಿ ಸಿಬ್ಬಂದಿ, ಗ್ರಾಮದ ಹಿರಿಯ ಮುಖಂಡರು, ಸ್ಥಳೀಯ ಶಾಲಾ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸೇರಿದಂತೆ ಜಿಲ್ಲೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದು, ಕಲ್ಯಾಣಿಯ ಸಂರಕ್ಷಣೆ ಮತ್ತು ಸ್ವಚ್ಛತೆಯ ಮಹತ್ವವನ್ನು ಸಾರ್ವಜನಿಕರಿಗೆ ತಿಳಿಸಿದರು.
ಐತಿಹಾಸಿಕ ಕಲ್ಯಾಣಿಯ ಶುದ್ಧೀಕರಣದೊಂದಿಗೆ ಸ್ಥಳೀಯ ಭಕ್ತಾದಿಗಳಿಗೆ ಅನುಕೂಲವಾಗುವಂತೆ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.


Post a Comment