Top News

ಶಿಡ್ಲಘಟ್ಟದಲ್ಲಿ ಹೈಟೆಕ್ ರೇಷ್ಮೆ ಗೂಡಿನ ಮಾರುಕಟ್ಟೆ ಕಾಮಗಾರಿ ಪರಿಶೀಲನೆ – ರೇಷ್ಮೆ ಕೃಷಿ ಅಭಿವೃದ್ಧಿ ಆಯುಕ್ತೆ ಶಿಲ್ಪಾ ನಾಗ್ ಭೇಟಿ

 ಚಿಕ್ಕಬಳ್ಳಾಪುರ ಜಿಲ್ಲೆ, ಶಿಡ್ಲಘಟ್ಟ: ರಾಜ್ಯದ ಪ್ರಮುಖ ರೇಷ್ಮೆ ಉತ್ಪಾದನಾ ಕೇಂದ್ರವಾಗಿರುವ ಶಿಡ್ಲಘಟ್ಟ ತಾಲ್ಲೂಕಿನಲ್ಲಿ ನಿರ್ಮಾಣವಾಗುತ್ತಿರುವ ನೂತನ ಹೈಟೆಕ್ ರೇಷ್ಮೆ ಗೂಡಿನ ಮಾರುಕಟ್ಟೆ ಕಾಮಗಾರಿಯನ್ನು ಇಂದು ರೇಷ್ಮೆ ಕೃಷಿ ಅಭಿವೃದ್ಧಿ ಆಯುಕ್ತರು ಹಾಗೂ ರೇಷ್ಮೆ ನಿರ್ದೇಶಕರು ಶ್ರೀಮತಿ ಶಿಲ್ಪಾ ನಾಗ್, ಸಿ.ಟಿ., ಭಾ.ಆ.ಸೇ ಅವರು ಭೇಟಿ ನೀಡಿ ಪರಿಶೀಲಿಸಿದರು.


ಶ್ರೀಮತಿ ಶಿಲ್ಪಾ ನಾಗ್ ಅವರು ಇಂದು ಶಿಡ್ಲಘಟ್ಟ ತಾಲ್ಲೂಕಿಗೆ ಆಗಮಿಸಿದ ಸಂದರ್ಭದಲ್ಲಿ ಅಧಿಕಾರಿಗಳು ಹಾಗೂ ಸ್ಥಳೀಯ ಆಡಳಿತದಿಂದ ಗೌರವಪೂರ್ವಕವಾಗಿ ಸ್ವಾಗತಿಸಲಾಯಿತು. ಬಳಿಕ ಅವರು ಅಧಿಕಾರಿಗಳೊಂದಿಗೆ ಶಿಡ್ಲಘಟ್ಟ ತಾಲ್ಲೂಕಿನ ಕಸಬಾ ಹೋಬಳಿಯ ಹನುಮಂತಪುರ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ನೂತನ ಹೈಟೆಕ್ ರೇಷ್ಮೆ ಗೂಡಿನ ಮಾರುಕಟ್ಟೆ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪರಿಶೀಲನೆ ವೇಳೆ ಕಾಮಗಾರಿಯ ವಿನ್ಯಾಸ ನಕ್ಷೆ, ಅಂದಾಜು ವೆಚ್ಚ ಪಟ್ಟಿ ಹಾಗೂ ನಿರ್ಮಾಣದ ವಿವಿಧ ತಾಂತ್ರಿಕ ಅಂಶಗಳ ಕುರಿತು ಅಧಿಕಾರಿಗಳೊಂದಿಗೆ ಸಮಗ್ರ ಚರ್ಚೆ ನಡೆಸಿದರು. ರೇಷ್ಮೆ ರೈತರಿಗೆ ಮತ್ತು ವ್ಯಾಪಾರಿಗಳಿಗೆ ಅನುಕೂಲವಾಗುವಂತೆ ಆಧುನಿಕ ಸೌಲಭ್ಯಗಳನ್ನು ಒಳಗೊಂಡ ಮಾರುಕಟ್ಟೆ ನಿರ್ಮಾಣದ ಪ್ರಗತಿ ಕುರಿತು ವಿವರಗಳನ್ನು ಪಡೆದುಕೊಂಡರು.


ಈ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು. ಜೊತೆಗೆ ರೇಷ್ಮೆ ಇಲಾಖೆಯ ಉಪನಿರ್ದೇಶಕರು, ಶಿಡ್ಲಘಟ್ಟ ಸರ್ಕಾರಿ ರೇಷ್ಮೆ ಗೂಡಿನ ಮಾರುಕಟ್ಟೆಯ ಉಪನಿರ್ದೇಶಕರು, ಶಿಡ್ಲಘಟ್ಟ ತಾಲ್ಲೂಕು ತಹಶೀಲ್ದಾರ್, ಭೂದಾಖಲೆಗಳ ಸಹಾಯಕ ನಿರ್ದೇಶಕರು ಹಾಗೂ ರೇಷ್ಮೆ ಇಲಾಖೆಯ ಇತರೆ ಅಧಿಕಾರಿ–ಸಿಬ್ಬಂದಿ ವರ್ಗ ಮತ್ತು ಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.


ನೂತನ ಹೈಟೆಕ್ ರೇಷ್ಮೆ ಗೂಡಿನ ಮಾರುಕಟ್ಟೆ ಪೂರ್ಣಗೊಂಡ ನಂತರ ಶಿಡ್ಲಘಟ್ಟ ಪ್ರದೇಶದ ರೇಷ್ಮೆ ರೈತರು ಮತ್ತು ವ್ಯಾಪಾರಿಗಳಿಗೆ ಹೆಚ್ಚಿನ ಸೌಲಭ್ಯ ಒದಗಿಸುವುದರ ಜೊತೆಗೆ, ರೇಷ್ಮೆ ವಾಣಿಜ್ಯ ಚಟುವಟಿಕೆಗಳಿಗೆ ಮತ್ತಷ್ಟು ಉತ್ತೇಜನ ದೊರಕುವ ನಿರೀಕ್ಷೆಯಿದೆ.





Post a Comment

Previous Post Next Post