ಏಪ್ರಿಲ್ 1ಕ್ಕೆ ಸಿದ್ಧತೆಗಳು; ಪೊಲೀಸ್ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಮನ್ವಯ
ತುಮಕೂರು, ಮಾರ್ಚ್ 21: ಸಿದ್ದಗಂಗಾ ಮಠದಲ್ಲಿ ಏಪ್ರಿಲ್ 1ರಂದು ಪರಮಪೂಜ್ಯ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಜನ್ಮದಿನ ಆಚರಣೆಯ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆಯನ್ನು ಆಯೋಜಿಸಲಾಗಿತ್ತು. ಈ ಸಭೆಯಲ್ಲಿ ತುಮಕೂರು ಜಿಲ್ಲಾ ಪೊಲೀಸ್ ಇಲಾಖೆಯ ಅಡಿಷನಲ್ ಎಸ್ಪಿ ಅಶೋಕ್ ವೆಂಕಟ್ ಅವರು ಭಾಗವಹಿಸಿದ್ದರು.
ಸಭೆಯಲ್ಲಿ ಸಿದ್ದಗಂಗಾ ಮಠದಲ್ಲಿ ನಡೆಯಲಿರುವ ಜನ್ಮದಿನೋತ್ಸವದ ಸಿದ್ಧತೆಗಳು, ಭಕ್ತರ ಸಂಖ್ಯೆ ನಿರ್ವಹಣೆ, ಸುರಕ್ಷತಾ ವ್ಯವಸ್ಥೆ, ಪಾರ್ಕಿಂಗ್, ಸಾರಿಗೆ, ಕುಡಿಯುವ ನೀರು, ವೈದ್ಯಕೀಯ ಸೌಲಭ್ಯಗಳು ಸೇರಿದಂತೆ ವಿವಿಧ ಅಂಶಗಳ ಕುರಿತು ಚರ್ಚಿಸಲಾಯಿತು.
ಕೇಂದ್ರ ಸಚಿವ ವಿ. ಸೋಮಣ್ಣ ಅವರು ಎಲ್ಲಾ ಇಲಾಖೆಗಳ ಅಧಿಕಾರಿಗಳಿಗೆ ಸೂಕ್ತ ಸೂಚನೆಗಳನ್ನು ನೀಡಿದರು. ಸಮಯಬದ್ಧವಾಗಿ ಎಲ್ಲಾ ವ್ಯವಸ್ಥೆಗಳನ್ನು ಪೂರ್ಣಗೊಳಿಸುವಂತೆ ತಿಳಿಸಿದರು. ಭಕ್ತರು ಸುಗಮವಾಗಿ ದರ್ಶನ ಪಡೆಯಲು ಮತ್ತು ಎಲ್ಲಾ ಕಾರ್ಯಕ್ರಮಗಳು ಶಾಂತಿಯುತವಾಗಿ ನೆರವೇರಲು ಅಗತ್ಯ ಸಿದ್ಧತೆ ಕೈಗೊಳ್ಳಬೇಕು ಎಂದು ಅವರು ಸೂಚಿಸಿದರು.
ತುಮಕೂರು ಜಿಲ್ಲಾ ಪೊಲೀಸ್ ಇಲಾಖೆಯು ಮಠದ ಆವರಣದಲ್ಲಿ ಬಂದೋಬಸ್ತ್ ವ್ಯವಸ್ಥೆ, ಸಂಚಾರ ನಿಯಂತ್ರಣ ಮತ್ತು ಭದ್ರತಾ ಕ್ರಮಗಳ ಕುರಿತು ವಿಶೇಷ ಯೋಜನೆಯನ್ನು ರೂಪಿಸಿದೆ. ಸಭೆಯಲ್ಲಿ ಪೊಲೀಸ್ ಸೇರಿದಂತೆ ಆಡಳಿತದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Post a Comment