ಎಚ್.ಎನ್. ವ್ಯಾಲಿ ಯೋಜನೆಯಡಿ ಹರಿಯುತ್ತಿರುವ ನೀರಿಗೆ ತೃತೀಯ ಶುದ್ಧೀಕರಣ (Tertiary Treatment) ಒದಗಿಸಬೇಕು ಎಂಬ ಬೇಡಿಕೆಯನ್ನು ಮುಂದಿಟ್ಟು ಇಂದು ಚಿಕ್ಕಬಳ್ಳಾಪುರ ನಗರದಲ್ಲಿ ಬಂದ್ ನಡೆಸಲಾಯಿತು. ಯುವ ನಾಯಕ ಸಂದೀಪ್ ರೆಡ್ಡಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳು ಈ ಬಂದ್‌ಗೆ ಕರೆ ನೀಡಿದ್ದವು.
ಬೆಳಿಗ್ಗೆಯಿಂದಲೇ ಪ್ರತಿಭಟನೆಗೆ ಭಾರಿ ಜನಸಮೂಹ ಸೇರುವುದರೊಂದಿಗೆ ನಗರದಲ್ಲಿ ಬೈಕ್ ರ್ಯಾಲಿ ನಡೆಸಲಾಯಿತು. ನಂತರ ಪ್ರತಿಭಟನಾಕಾರರು ಪಾದಯಾತ್ರೆಯ ಮೂಲಕ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಟೌನ್ ಹಾಲ್ ವರೆಗೆ ಮೆರವಣಿಗೆ ನಡೆಸಿದರು. ಈ ಸಂದರ್ಭದಲ್ಲಿ ಯಲಹಂಕ ಶಾಸಕರಾದ ಎಸ್. ಆರ್.ವಿಶ್ವನಾಥ್ ಅವರ ನೇತೃತ್ವದಲ್ಲಿ ಸಾವಿರಾರು ಜನರು ಸೇರಿ ಸರ್ಕಾರದ ಗಮನ ಸೆಳೆಯುವ ಪ್ರಯತ್ನ ಮಾಡಿದರು.
ಪ್ರತಿಭಟನಾಕಾರರು ಮಾತನಾಡಿ, ಎಚ್.ಎನ್. ವ್ಯಾಲಿ ಯೋಜನೆಯ ನೀರು ಸಮರ್ಪಕವಾಗಿ ಶುದ್ಧೀಕರಿಸದೇ ಹರಿಸಲಾಗುತ್ತಿರುವುದರಿಂದ ಭೂಗರ್ಭ ಜಲ ಮೂಲಗಳು ಮಾಲಿನ್ಯಗೊಳ್ಳುತ್ತಿರುವ ಆತಂಕ ವ್ಯಕ್ತಪಡಿಸಿದರು. ಇದರಿಂದ ಚಿಕ್ಕಬಳ್ಳಾಪುರ ಜಿಲ್ಲೆಯ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುವ ಸಾಧ್ಯತೆ ಇರುವುದಾಗಿ ಅವರು ಹೇಳಿದರು. ಆದ್ದರಿಂದ ಈ ನೀರಿಗೆ ತಕ್ಷಣ ತೃತೀಯ ಶುದ್ಧೀಕರಣ ವ್ಯವಸ್ಥೆ ಕಲ್ಪಿಸಬೇಕೆಂದು ಸರ್ಕಾರವನ್ನು ಒತ್ತಾಯಿಸಿದರು.
ನಗರದಲ್ಲಿ ನಡೆದ ಬಂದ್‌ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದ್ದು, ಹೆಚ್ಚಿನ ಅಂಗಡಿ ಮಾಲೀಕರು ಸ್ವಯಂಪ್ರೇರಿತವಾಗಿ ಅಂಗಡಿಗಳನ್ನು ಮುಚ್ಚಿ ಪ್ರತಿಭಟನೆಗೆ ಬೆಂಬಲ ಸೂಚಿಸಿದರು. ಬಂದ್ ಸಂಪೂರ್ಣ ಶಾಂತಿಯುತವಾಗಿ ನಡೆದಿದ್ದು ಯಾವುದೇ ಅಹಿತಕರ ಘಟನೆಗಳು ವರದಿಯಾಗಿಲ್ಲ.
ಪ್ರತಿಭಟನೆಯಲ್ಲಿ ವಿವಿಧ ಸಂಘಟನೆಗಳ ಮುಖಂಡರು, ಯುವಕರು ಹಾಗೂ ಸಾರ್ವಜನಿಕರು ಭಾಗವಹಿಸಿ ಚಿಕ್ಕಬಳ್ಳಾಪುರಕ್ಕೆ ಶುದ್ಧ ನೀರು ಒದಗಿಸಬೇಕೆಂದು ಸರ್ಕಾರದ ಮೇಲೆ ಒತ್ತಡ ಹೇರಿದರು.


Post a Comment